ಜ. 28 ರಿಂದ ಗ್ರಾಮೀಣ ಸಫಾಯಿ ಕರ್ಮಚಾರಿ ಸಮೀಕ್ಷೆ : ಎಂ. ಕನಗವಲ್ಲಿ

0
28


ಕೊಪ್ಪಳ : ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಲ್ಲಿ ಜ. 28 ರಿಂದ ಗ್ರಾಮೀಣ ಮಟ್ಟದಲ್ಲಿ ಸಫಾಯಿ ಕರ್ಮಚಾರಿಗಳ ಸಮೀಕ್ಷಾ ಕಾರ್ಯ ನಡೆಸಲು ಅಗತ್ಯ ಸಿದ್ಧತೆಗಳನ್ನು ಕೈಗೊಂಡು, ನಿಖರ ಮಾಹಿತಿ ಸಂಗ್ರಹಿಸಲು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯ ಗ್ರಾಮೀಣ ಪ್ರದೇಶದ ಸಫಾಯಿ ಕರ್ಮಚಾರಿಗಳ (ಮ್ಯಾನುವೆಲ್ ಸ್ಕ್ಯಾವೆಂಜರ್ಸ್) ಸಮೀಕ್ಷೆ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರದಂದು ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿನ ಸಫಾಯಿ ಕರ್ಮಚಾರಿಗಳ ಸಮೀಕ್ಷಾ ಕಾರ್ಯ ಜ. 28 ರಿಂದ ಫೆ. 11 ರವರೆಗೆ ನಡೆಯಲಿದ್ದು, ಈ ಕುರಿತಂತೆ ಈಗಾಗಲೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಉಸ್ತುವಾರಿ ಸಮಿತಿ ರಚನೆಯಾಗಿದೆ. ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಜಿಲ್ಲಾ ಸಮೀಕ್ಷಾಧಿಕಾರಿಯಾಗಿದ್ದು, ಆಯಾ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು ತಾಲೂಕು ಸಮೀಕ್ಷಾಧಿಕಾರಿ ಆಗಿರುತ್ತಾರೆ. ಸಮೀಕ್ಷಾ ಕಾರ್ಯಕ್ಕೆ ಸಂಬಂಧಿಸಿದಂತೆ ಕೊಪ್ಪಳ ಜಿಲ್ಲೆಗೆ ಈರಣ್ಣ ಕುಂಬಾರ್ ಅವರು ಜಿಲ್ಲಾ ಮಟ್ಟದ ಸಂಪನ್ಮೂಲ ವ್ಯಕ್ತಿಯನ್ನಾಗಿ ನೇಮಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿನ ಸಫಾಯಿ ಕರ್ಮಚಾರಿಗಳ ಸಮೀಕ್ಷೆಯನ್ನು ಆಯಾ ಗ್ರಾಮ ಪಂಚಾಯತಿಯ ಪಿಡಿಓ/ ಕಾರ್ಯದರ್ಶಿ, ಕರವಸೂಲಿಗಾರ ಅಲ್ಲದೆ ಸರ್ಕಾರೇತರ ಸಂಸ್ಥೆಯ ಓರ್ವ ಪ್ರತಿನಿಧಿ ಸೇರಿದಂತೆ ಕನಿಷ್ಟ ಮೂವರು ಸಮೀಕ್ಷೆ ನಡೆಸಬೇಕು. 2011 ರಲ್ಲಿ ನಡೆಸಲಾದ ಸಾಮಾಜಿಕ ಮತ್ತು ಜಾತಿ ಸಮೀಕ್ಷೆಯಲ್ಲಿ ಕೊಪ್ಪಳ ಜಿಲ್ಲೆಯಲ್ಲಿ 51 ಮ್ಯಾನುವೆಲ್ ಸ್ಕ್ಯಾವೆಂಜರ್ಸ್ ಕುಟುಂಬಗಳನ್ನು ಗುರುತಿಸಲಾಗಿದ್ದು, ಈ ಕುರಿತು ಸದ್ಯ ನಡೆಸಲಾಗುವ ಸಮೀಕ್ಷೆಯಲ್ಲಿ ಇಂತಹ ಕುಟುಂಬಗಳ ಮಾಹಿತಿಯನ್ನು ಖಚಿತಪಡಿಸಿಕೊಳ್ಳಬೇಕು. ಅಲ್ಲದೆ ಇತರೆ ಸಫಾಯಿ ಕರ್ಮಚಾರಿ ಕುಟುಂಬಗಳಿದ್ದಲ್ಲಿ ಅಂತಹ ಕುಟುಂಬಗಳ ಸಮೀಕ್ಷೆ ಕೈಗೊಂಡು, ನಿಗದಿತ ನಮೂನೆಯಲ್ಲಿ ನಿಖರ ಮಾಹಿತಿ ಸಂಗ್ರಹಿಸಬೇಕು. ಒಟ್ಟಾರೆ ಗ್ರಾಮೀಣ ಪ್ರದೇಶದಲ್ಲಿನ ಸಫಾಯಿ ಕರ್ಮಚಾರಿ ಸಮೀಕ್ಷೆ ಕಾರ್ಯ ವ್ಯವಸ್ಥಿತ ರೀತಿಯಲ್ಲಿ ಕೈಗೊಳ್ಳಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆರ್. ರಾಮಚಂದ್ರನ್ ಅವರು ಮಾತನಾಡಿ, ಪ್ರತಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಮೀಕ್ಷೆ ಕುರಿತಂತೆ ಡಂಗುರ ಹಾಕಿಸಿ ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ವಿಶೇಷವಾಗಿ ಪ.ಜಾತಿ ಮತ್ತು ಪ.ವರ್ಗಗಳ ಕಾಲೋನಿಗಳಲ್ಲಿ ಪ್ರಚಾರಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಜ. 19 ರಿಂದ ಆಯಾ ತಾಲೂಕು ಮಟ್ಟದಲ್ಲಿ ಸಮೀಕ್ಷೆಗೆ ಸಂಬಂಧಿಸಿದಂತೆ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಬಿ. ಕಲ್ಲೇಶ್, ಜಿಲ್ಲಾ ಪಂಚಾಯತಿ ಯೋಜನಾ ನಿರ್ದೇಶಕ ರವಿ ಬಸರಿಹಳ್ಳಿ, ತಾಲೂಕುಗಳ ತಹಸಿಲ್ದಾರರು, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳು ಉಪಸ್ಥಿತರಿದ್ದರು.

loading...

LEAVE A REPLY

Please enter your comment!
Please enter your name here