ದಿನದಿಂದ ದಿನಕ್ಕೆ ರಂಗೇರುತ್ತಿರುವ ಪುರಸಭೆಯ ಚುನಾವಣೆ

0
16

ಕನ್ನಡಮ್ಮ ಸುದ್ದಿ-ಕುಮಟಾ: ಇಲ್ಲಿನ ಪುರಸಭೆಯ 22 ವಾರ್ಡ್‌ಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ತ್ರಿಕೋನ ಸ್ಪರ್ಧೆ ನಡೆಯಲಿದ್ದು, ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ.
ಕುಮಟಾ ಪುರಸಭೆ ವ್ಯಾಪ್ತಿಯ 23 ವಾರ್ಡ್‌ಗಳ ಪೈಕಿ ಪರಿಶಿಷ್ಟ ಪಂಗಡ ಮೀಸಲಾತಿ ಹೊಂದಿರುವ 2ನೇ ವಾರ್ಡ್‌ನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಲಕ್ಷ್ಮೀ ಗೊಂಡ ಅವರು ಮಾತ್ರ ನಾಮಪತ್ರ ಸಲ್ಲಿಸಿದ್ದರಿಂದ ಅವರು ಅವಿರೋಧ ಆಯ್ಕೆಯಾದರು. ಹಾಗಾಗಿ 22 ವಾರ್ಡ್‌ಗಳಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಬಹುತೇಕ ವಾರ್ಡ್‌ಗಳಲ್ಲಿ ಬಿಜೆಪಿ, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಅಭ್ಯರ್ಥಿಗಳು ಪ್ರಬಲ ಪೈಪೋಟಿ ನೀಡುತ್ತಿರುವುದರಿಂದ ತ್ರಿಕೋನ ಸ್ಪರ್ಧೆ ನಡೆಯಲಿದೆ. ಹಾಗಾಗಿ ರವಿವಾರದಿಂದ ಎಲ್ಲ ವಾರ್ಡ್‌ಗಳಲ್ಲಿ ಚುನಾವಣಾ ಪ್ರಚಾರ ತೀವ್ರಗೊಂಡಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರ ಸಾಧನೆಯನ್ನೆ ಪ್ರಮುಖ ಅಸ್ತ್ರವಾಗಿಸಿಕೊಂಡು ಪ್ರಚಾರ ನಡೆಸಲಾಗುತ್ತಿದೆ.
ಬಿಜೆಪಿ ಅಭ್ಯರ್ಥಿಗಳಿಗೆ ಪ್ರಧಾನಿ ಮೋದಿ ಅವರ ಹೆಸರೇ ಪ್ರಚಾರದ ವಸ್ತುವಾಗಿದೆ. ಕೇಂದ್ರ ಸರ್ಕಾರದ ಉಜ್ವಲ ಯೋಜನೆ ಸೇರಿದಂತೆ ಪ್ರಮುಖ ಯೋಜನೆಗಳ ಬಗೆಗೆ ಮತದಾರರಲ್ಲಿ ಜಾಗೃತಿ ಮೂಡಿಸುವ ಜತೆಗೆ ಮೋದಿ ಅವರನ್ನು ಬೆಂಬಲಿಸಲು ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವಂತೆ ಮತದಾರರಲ್ಲಿ ಮೋದಿಪರ ಅಲೆಯನ್ನೆ ಎಬ್ಬಿಸಲಾಗುತ್ತಿದೆ. ಕೆಲ ಅಭ್ಯರ್ಥಿಗಳು ಪ್ರಚಾರದ ಕರಪತ್ರದಲ್ಲೂ ಮೋದಿ ಅವರ ಭಾವಚಿತ್ರವನ್ನೆ ಬಳಸಿಕೊಂಡು ಉತ್ಸಾಹದಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಅಲ್ಲದೆ ಕೇಂದ್ರ ಸಚಿವ ಅನಂತ ಕುಮಾರ ಹೆಗಡೆ ಅವರು ಸಹಃ ಕೆಲ ವಾರ್ಡ್‌ಗಳಲ್ಲಿ ಪ್ರಚಾರ ನಡೆಸಿದ್ದಾರೆ. ಶಾಸಕ ದಿನಕರ ಶೆಟ್ಟಿ ಅವರು ಎಲ್ಲ ವಾರ್ಡ್‌ಗಳಲ್ಲೂ ಅಭ್ಯರ್ಥಿಪರ ಪ್ರಚಾರ ನಡೆಸುತ್ತಿದ್ದಾರೆ.
ಕಳೆದ ಪುರಸಭೆ ಚುನಾವಣೆಯಲ್ಲಿ ಬಿಜೆಪಿಗೆ ಪುರಸಭೆಯ ಗದ್ದುಗೆ ತಪ್ಪಿಸಲು ಕಾಂಗ್ರೆಸ್‌ ಮತ್ತು ಜೆಡಿಎಸ್‌ ಮೈತ್ರಿ ಮಾಡಿಕೊಂಡಿತ್ತು. ಆದರೆ ಈಗ ರಾಜ್ಯದಲ್ಲಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ನ ಮೈತ್ರಿ ಸರ್ಕಾರವಿದ್ದರೂ ಸ್ಥಳೀಯ ಮುಖಂಡರು ಪುರಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿಲ್ಲ. ಕಾಂಗ್ರೆಸ್‌ 22 ವಾರ್ಡ್‌ಗಳಲ್ಲಿ ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಜೆಡಿಎಸ್‌ ಕೂಡ 17 ವಾರ್ಡ್‌ಗಳಲ್ಲಿ ಸ್ಪರ್ಧೆ ಮಾಡುತ್ತಿದೆ. ಕಾಂಗ್ರೆಸ್‌ ಅಭ್ಯರ್ಥಿಗಳು ರಾಜ್ಯದಲ್ಲಿ ನಮ್ಮದೆ ಪಕ್ಷದ ಸರ್ಕಾರವಿರುವುದರಿಂದ ಕಾಂಗ್ರೆಸ್‌ನನ್ನು ಬೆಂಬಲಿಸುವಂತೆ ಮತದಾರರನ್ನು ಒಲೈಸುತ್ತಿದ್ದಾರೆ. ಅಲ್ಲದೆ ಕಳೆದ ಐದು ವರ್ಷಗಳಲ್ಲಿ ಕೈಗೊಂಡ ಕಾಂಗ್ರೆಸ್‌ ಸರ್ಕಾರದ ಸಾಧನೆಯೇ ಪ್ರಚಾರದ ವಸ್ತುವಾಗಿದೆ. ಇನ್ನು ಜೆಡಿಎಸ್‌ ಅಭ್ಯರ್ಥಿಗಳು ರಾಜ್ಯದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ನಮ್ಮ ಪಕ್ಷದವರು.
ಪುರಸಭೆಯಲ್ಲಿ ಜೆಡಿಎಸ್‌ ಆಡಳಿತಕ್ಕೆ ಬಂದರೆ ಖಂಡಿತ ಈ ಪಟ್ಟಣಕ್ಕೆ ವಿಶೇಷ ಅನುದಾನವನ್ನು ಮಂಜೂರಿ ಮಾಡಿಸುತ್ತೇವೆ. ಹಾಗಾಗಿ ಜೆಡಿಎಸ್‌ನ್ನು ಬೆಂಬಲಿಸುವಂತೆ ಮತದಾರರ ಮನವೊಲೈಸುವ ಕಾರ್ಯದಲ್ಲಿ ತೊಡಗಿದ್ದಾರೆ. ಒಟ್ಟಾರೆ ಪ್ರಚಾರದ ಭರಾಟೆ ತೀವ್ರಗೊಂಡಿದ್ದರಿಂದ ಪುರಸಭೆ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ.

loading...