ರಾಮದುರ್ಗ : ಅಂತರ್ಜಲಮಟ್ಟ ಹೆಚ್ಚಿಸುವ ನಿಟ್ಟಿನಲ್ಲಿ ಕೊಳವೆಭಾವಿ ಮರು ಪೂರಣ, ಇಂಗುಗುಂಡಿ ನಿರ್ಮಾಣ, ಕೆರೆ ಹೂಳೆತ್ತುವುದು, ಮಳೆಗಾಲ ಪ್ರಾರಂಭವಾಗುವ ಸಂದರ್ಭದಲ್ಲಿ ಅರಣ್ಯ ಪ್ರದೇಶ, ಸ್ಮಶಾನ, ಗುಡ್ಡಗಾಡು ಪ್ರದೇಶದಲ್ಲಿ ಬೀಜದುಂಡೆಗಳನ್ನು ಹಾಕಿ ಕಾಡಿನ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ ಎಂದು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ತಾಲೂಕಾ ಯೋಜನಾಧಿಕಾರಿ ಸತೀಶ ಎಂ. ಹೇಳಿದರು.
ತಾಲೂಕಿನ ಕಿಲಬನೂರ ಗ್ರಾಮದಲ್ಲಿ ಪರಿಸರ ಸಂರಕ್ಷಣಾ ಜಾಗೃತಿ ಮೂಡಿಸಲು ಏರ್ಪಡಿಸಿದ ಸಾಮೂಹಿಕ ಬೀಜದುಂಡೆ ತಯಾರಿಕಾ ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರು.
ತಾಲೂಕಿನಲ್ಲಿ ಪರಿಸರ ಸಂರಕ್ಷಣೆ ಮಾಡಲು ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ನೇತೃತ್ವದಲ್ಲಿ ಅನೇಕ ಪರಿಸರಾತ್ಮಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ನಾಗರಿಕರು ಕಾರ್ಯಕ್ರಮಕ್ಕೆ ಸಹಕಾರ ನೀಡಬೇಕೆಂದು ಅವರು ಮನವಿ ಮಾಡಿದರು.
ಜನಜಾಗೃತ ಸಮಿತಿಯ ಜಿಲ್ಲಾ ಅಧ್ಯಕ್ಷ ಅಶೋಕ ಕುಲಗೋಡ ಮಾತನಾಡಿ, ಸಂಸ್ಥೆಯ ವತಿಯಿಂದ ಸಮಾಜಕ್ಕೆ ಉಪಯುಕ್ತ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಅವುಗಳ ಯಶಸ್ವಿಗೆ ಎಲ್ಲರ ಸಹಕಾರ, ಪಾಲ್ಗೊಳ್ಳುವಿಕೆ ಬಹಳ ಮುಖ್ಯವೆಂದರು.
ಗ್ರಾ.ಪಂ ಸದಸ್ಯರು ಹಾಗೂ ಒಕ್ಕೂಟದ ಪದಾಧಿಕಾರಿಗಳು ಇದ್ದರು. ಮಹಿಳಾ ಸಂಘಗಳ ಒಕ್ಕೂಟ ಪದಾಧಿಕಾರಿಗಳು ಇದೇ ಸಂದರ್ಭದಲ್ಲಿ ಸಾಮೂಹಿಕ ಬೀಜದುಂಡೆ ತಯಾರಿಸಿದರು.
ತಾಲೂಕಿನ ಕೃಷಿ ಮೇಲ್ವಿಚಾರಕ ಸದಾಶಿವಪ್ಪ ಸ್ವಾಗತಿಸಿದರು. ಮೇಲ್ವಿಚಾರಕಿ ಪುಷ್ಪಾ ನಿರೂಪಿಸಿದರು. ಸೇವಾ ಪ್ರತಿನಿಧಿ ರುಕ್ಮೀಣಿ ವಂದಿಸಿದರು.

loading...