ಪೌರ ಕಾರ್ಮಿಕರು ಸಮಾಜದ ಮುಖ್ಯವಾಹಿನಿಗೆ ಬರಬೇಕು

0
57

ಗದಗ: ಪೌರಕಾರ್ಮಿಕರು ಸಮಾಜದ ಮುಖ್ಯವಾಹಿನಿಗೆ ಬರಬೇಕು. ಶುಚಿತ್ವ ಕೆಲಸಗಳಲ್ಲಿ ತೊಡಗಿರುವ ಸಫಾಯಿ ಕರ್ಮಚಾರಿಗಳ ಜೀವನಮಟ್ಟ ಸುಧಾರಣೆಗೆ ಕ್ರಮ ಕೈಗೊಳ್ಳಬೇಕು ಎಂದು ರಾಷ್ಟ್ರೀಯ ಸಫಾಯಿ ಕರ್ಮಚಾರಿ ಆಯೋಗದ ಸದಸ್ಯ ಜಗದೀಶ ಹಿರೇಮನಿ ಅವರು ಹೇಳಿದರು.
ಅವರಿಂದು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜರುಗಿದ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳ ಸಫಾಯಿ ಕರ್ಮಚಾರಿಗಳ ಕುರಿತು ಸಭೆಯಲ್ಲಿ ಮಾತನಾಡಿದರು. ಪೌರಕಾರ್ಮಿಕರಿಗೆ ಗೃಹ ಭಾಗ್ಯ ಯೋಜನೆ, ಪೌರ ಕಾರ್ಮಿಕರ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶಾತಿ ಅವಕಾಶ ಕಲ್ಪಿಸಿ ಈ ಸಮುದಾಯದವರು ಸಮೃದ್ಧ ಜೀವನ ನಡೆಸಲು ಸಂಬಂಧಪಟ್ಟ ಇಲಾಖೆಯವರು ಮುಂದಾಗಬೇಕು ಎಂದರು.
ಗದಗ ಜಿಲ್ಲೆಯಲ್ಲಿ ಮ್ಯಾನುವಲ್ ಸ್ಕಾವೇಂಜರ್‍ಗಳನ್ನು ಗುರುತಿಸಿ ಅಂತಹವರ ಪಟ್ಟಿ ಮಾಡಿ ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ಯೋಜನೆಗಳ ಸೌಲಭ್ಯಗಳು ಅವರಿಗೆ ತಲುಪುವಂತೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಅವರಿಗೆ ಸಾಲ ಸೌಲಭ್ಯ ಒದಗಿಸಿ ಅವರು ಪರ್ಯಾಯ ಉದ್ಯೋಗ ಮಾಡಲು ಮಾರ್ಗದರ್ಶನ ನೀಡಬೇಕು. ಅಂಬೇಡ್ಕರ ಅಭಿವೃದ್ಧಿ ನಿಗಮದ ವತಿಯಿಂದ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಫಾಯಿ ಕರ್ಮಚಾರಿಗಳಿಗೆ ವಿವಿಧ ಯೋಜನೆಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಕಾರ್ಯಾಗಾರದಲ್ಲಿ ಯೋಜನೆಗಳ ಕುರಿತು ಕರಪತ್ರ ವಿತರಿಸಿ ಮಾಹಿತಿ ನೀಡುವುದು ಅವಶ್ಯಕವಾಗಿದೆ ಎಂದರು.
ಪೌರಕಾರ್ಮಿಕರಿಗೆ ಮಾಸ್ಕ್, ಎಪ್ರಾನ್, ಗಮ್ ಬೂಟ್, ಪೊರಕೆ ಮುಂತಾದ ಪರಿಕರಗಳನ್ನು ಕಡ್ಡಾಯವಾಗಿ ಒದಗಿಸಬೇಕು. ಮೂರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ನಡೆಸಬೇಕು. ಜಿಲ್ಲೆಯಲ್ಲಿ ಸಫಾಯಿ ಕರ್ಮಚಾರಿಗಳ ಕುರಿತ ಸಮೀಕ್ಷೆಯನ್ನು ಮಾಡಬೇಕು ಅಗತ್ಯ ಬಿದ್ದಲ್ಲಿ ಪರೋಕ್ಷ ಪರೀಶೀಲನೆ ಮೂಲಕ ವಾಸ್ತವ ಸಮೀಕ್ಷೆ ಸಲ್ಲಿಸಬೇಕು. ಪೌರ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕೆ ವಿದ್ಯಾರ್ಥಿ ವೇತನ ಸೌಲಭ್ಯವನ್ನು ಸಮರ್ಪಕವಾಗಿ ನೀಡಬೇಕು. ಪ್ರಧಾನ ಮಂತ್ರಿ ಆರೋಗ್ಯ ವಿಮಾ ಯೋಜನೆಯು ಕೇಂದ್ರ ಸರ್ಕಾರದ ಯೋಜನೆಯಾಗಿದ್ದು ಇದರ ಸದುಪಯೋಗವನ್ನು ಪೌರಕಾರ್ಮಿಕ ಪಡೆಯುವಂತಾಗಬೇಕು ಎಂದರು.
ಮ್ಯಾನ್‍ಹೋಲ್/ ಮಲದ ಗುಂಡಿಗಳನ್ನು ಸ್ವಚ್ಛಗೊಳಿಸಲು ಸಕ್ಕಿಂಗ್ ಮತ್ತು ಜೆಟ್ಟಿಂಗ್ ಯಂತ್ರಗಳ ಬಳಕೆ, ಪೌರಕಾರ್ಮಿಕರಿಗೆ ಗಮ್ ಬೂಟ್ಸ್, ಮಾಸ್ಕ್, ಹ್ಯಾಂಡ ಗ್ಲೌಸು ವಿತರಣೆ, ಗೃಹ ಭಾಗ್ಯ ಯೋಜನೆ, ಕನಿಷ್ಟ ವೇತನ ಪಾವತಿ, ಎ.ಎಸ್.ಐ. ಮತ್ತು ಪ್ರೊವಿಡಂಟ್ ಫಂಟ್ ವಿತರಣೆ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ಜಿಲ್ಲಾಧಿಕಾರಿ ಮನೋಜ್ ಜೈನ್, ಅಪರ ಜಿಲ್ಲಾಧಿಕಾರಿ ರಮೇಶ ದೇಸಾಯಿ, ನಗರಸಭೆ ಪೌರಾಯುಕ್ತ ಮನ್ಸೂರ ಅಲಿ, ಸಮಾಜ ಕಲ್ಯಾಣ ಇಲಾಖೆಯ ಉಪ£ರ್ದೇಶಕ ಖಾಜಾ ಹುಸೇನ ಮುಧೋಳ, ಪುರಸಭೆ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

loading...