ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ದಿಟ್ಟ ಹೆಜ್ಜೆ: ಸಚಿವ ಆರ್.ವಿ.ದೇಶಪಾಂಡೆ

0
27

ಕಾರವಾರ : ಕಳೆದ ಮೂರು ವರ್ಷಗಳಲ್ಲಿ ಜಿಲ್ಲೆಯಲ್ಲಿ ಮೂಲಸೌಲಭ್ಯ ಅಭಿವೃದ್ಧಿ, ಪ್ರವಾಸೋದ್ಯಮ, ಮಾನವಸಂಪನ್ಮೂಲ ಅಭಿವೃದ್ಧಿಗೆ ಹಲವಾರು ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸಲಾಗಿದ್ದು, ಇತಿಹಾಸದ ಪುಟದಲ್ಲಿ ಸುವರ್ಣ ಅಕ್ಷರಗಳಲ್ಲಿ ಬರೆದಿಡುವಂತಹ ಸಾಧನೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ.ದೇಶಪಾಂಡೆ ಅವರು ಹೇಳಿದರು.
ಅವರು ಶುಕ್ರವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕಳೆದ ಮೂರು ವರ್ಷಗಳ ಅವಧಿಯಲ್ಲಿ ಉತ್ತರಕನ್ನಡ ಜಿಲ್ಲೆಯಲ್ಲಿ ಸಾಧಿಸಿರುವ ಪ್ರಗತಿ ಕುರಿತು ಪ್ರಕಟಿಸಲಾಗಿರುವ ಪುಸ್ತಕವನ್ನು ಬಿಡುಗಡೆಗೊಳಿಸಿ ಮಾತನಾಡಿದರು.
ಉನ್ನತ ಶಿಕ್ಷಣ, ರಸ್ತೆಗಳ ಅಭಿವೃದ್ಧಿ, ಪ್ರವಾಸಿ ತಾಣಗಳ ಅಭಿವೃದ್ಧಿ, ಆರೋಗ್ಯ ಕ್ಷೇತ್ರ ಹಾಗೂ ಶಿಕ್ಷಣ, ಸಮಾಜ ಕಲ್ಯಾಣ ಕ್ಷೇತ್ರದಲ್ಲಿ ಸುಧಾರಣೆ, ಮೂಲಸೌಕರ್ಯಗಳ ಅಭಿವೃದ್ಧಿಗೆ ಹಿಂದೆಂದೂ ನೀಡದಷ್ಟು ಅನುದಾನವನ್ನು ಕಳೆದ ಮೂರು ವರ್ಷಗಳ ಅವಧಿಯಲ್ಲಿ ಜಿಲ್ಲೆಗೆ ಒದಗಿಸಲಾಗಿರುವುದು ದಾಖಲೆಯಾಗಿದೆ. ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ರಾಜ್ಯದ ಜನತೆಗೆ ನೀಡಿದ್ದ ಭರವಸೆಗಳ ಪೈಕಿ ಕಳೆದ 3ವರ್ಷಗಳಲ್ಲಿ ಶೇ.75ಕ್ಕೂ ಹೆಚ್ಚು ಭರವಸೆಗಳನ್ನು ಈಡೇರಿಸಲಾಗಿದೆ ಎಂದು ಅವರು ಹೇಳಿದರು.
ವೈದ್ಯಕೀಯ ಕಾಲೇಜು: ಜಿಲ್ಲೆಯ ಜನತೆಯ ಬಹುವರ್ಷಗಳ ಕನಸಾಗಿದ್ದ ಕಾರವಾರ ವೈದ್ಯಕೀಯ ಕಾಲೇಜು ಈ ವರ್ಷದಿಂದ ಆರಂಭವಾಗಲಿದ್ದು, ಈಗಾಗಲೇ ಸುಮಾರು 150ಕೋಟಿ ರೂ. ವೆಚ್ಚ ಮಾಡಲಾಗಿದೆ. ಇನ್ನುಳಿದ ಕಾಮಗಾರಿಗಳಿಗೆ ಸರ್ಕಾರ ಅಗತ್ಯ ಅನುದಾನವನ್ನು ಒದಗಿಸಲಿದೆ. ವೈದ್ಯಕೀಯ ಕಾಲೇಜು ಪ್ರಾರಂಭದಿಂದ ಜಿಲ್ಲೆಯ ಆರೋಗ್ಯ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆ ನಿರೀಕ್ಷಿಸಲಾಗಿದೆ. ಕಾರವಾರದಲ್ಲಿ ಹಲವು ವರ್ಷದಿಂದ ನೆನೆಗುದಿಗೆ ಬಿದ್ದಿದ್ದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಕಟ್ಟಡ ಕಾಮಗಾರಿ ಈಗ ಬಹುತೇಕ ಅಂತಿಮ ಹಂತದಲ್ಲಿದ್ದು, ಆದಷ್ಟು ಬೇಗನೆ ಕಾಲೇಜು ಪ್ರಾರಂಭಗೊಳ್ಳಲಿದೆ ಎಂದರು.
ಮೂಲಸೌಕರ್ಯ ಅಭಿವೃದ್ಧಿ: ಕಳೆದ ಮೂರು ವರ್ಷಗಳಲ್ಲಿ ಲೋಕೋಪಯೋಗಿ ಇಲಾಖೆ ಮೂಲಕ 875ಕಿಮಿ ಉದ್ದದ ರಸ್ತೆ ನಿರ್ಮಾಣ ಮಾಡಲಾಗಿರುವುದು ದಾಖಲೆಯಾಗಿದೆ. ಇದೇ ಅವಧಿಯಲ್ಲಿ 19ಸೇತುವೆಗಳನ್ನು ಹೊಸದಾಗಿ ನಿರ್ಮಿಸಲಾಗಿದೆ. ಇನ್ನೂ 4ಹೊಸ ಕಾಮಗಾರಿಗಳಿಗೆ ಅನುಮೋದನೆ ನೀಡಲಾಗಿದ್ದು, ಎಲ್ಲಾ ರಾಜ್ಯ ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ಹುಬ್ಬಳ್ಳಿ-ಅಂಕೋಲಾ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಹಸಿರು ನಿಶಾನೆ ಸಿಗುವ ಆಶಾಭಾವವಿದ್ದು, ಜಿಲ್ಲೆಯ ಅಭಿವೃದ್ಧಿಗೆ ಹೊಸ ಶಕೆ ಆರಂಭವಾಗಲಿದೆ ಎಂದು ಹೇಳಿದರು.
ಆರೋಗ್ಯ ಇಲಾಖೆಯಲ್ಲಿ ಮೂಲಸೌರ್ಕ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ. 100ಹಾಸಿಗೆಯ 8ತಾಲೂಕು ಆಸ್ಪತ್ರೆ, 15 ಪ್ರಾಥಮಿಕ ಆರೋಗ್ಯ ಕೇಂದ್ರ, 3ಉಪಕೇಂದ್ರ, ಒಂದು ಎಂಸಿಎಚ್ ಆಸ್ಪತ್ರೆಗಳನ್ನು ಮಂಜೂರು ಮಾಡಿ ಕಾಮಗಾರಿಗಳು ನಡೆಯುತ್ತಿವೆ. ಪ್ರಸ್ತುತ 18ಆಸ್ಪತ್ರೆಗಳ ನವೀಕರಣ ಸೇರಿದಂತೆ 45ಕಾಮಗಾರಿಗಳನ್ನು 85ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುತ್ತಿದೆ. ಎಂಡೋಸಲ್ಫಾನ್ ಪೀಡಿತರಿಗೆ 4.59ಕೋಟಿ ರೂ. ನೆರವು ಒದಗಿಸಲಾಗಿದೆ ಎಂದರು.
ಪ್ರವಾಸೋದ್ಯಮ ಕ್ಷೇತ್ರದಲ್ಲಿ ರಾಜ್ಯ 3ನೇ ಸ್ಥಾನ ಪಡೆದಿದ್ದು, ಕೈಗಾರಿಕಾ ವಲಯದಲ್ಲಿ ಸಹ ಮೂರನೇ ಸ್ಥಾನ ಪಡೆದಿದೆ. ಜಿಲ್ಲೆಯಲ್ಲಿ ಕೈಗಾರಿಕೆ ಅಭಿವೃದ್ಧಿಗೆ ಹೊಸ ಯೋಜನೆಗಳನ್ನು ರೂಪಿಸಲಾಗಿದೆ. ಕುಮಟಾದಲ್ಲಿ ಗೇರುಬೀಜ ಟ್ರೇಡಿಂಗ್ ಸೆಂಟರ್, ತದಡಿಯಲ್ಲಿ ಮೀನು ರಫ್ತುಗಾರರಿಗೆ ನೆರವಾಗಲು ಮೂಲಸೌಕರ್ಯ ಅಭಿವೃದ್ಧಿ, ದಾಂಡೇಲಿಯಲ್ಲಿ ಸ್ಕಿಲ್ ಟ್ರೈನಿಂಗ್ ಸೆಂಟರ್, ಕೈಗಾರಿಕಾ ವಲಯಗಳ ಅಭಿವೃದ್ಧಿಗೆ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.
ರೈತರಿಗೆ ನೆರವು: ಎಲ್ಲಾ ರೈತರಿಗೆ ಅತ್ಯಾಧುನಿಕ ಯಂತ್ರೋಪಕರಣಗಳು ಲಭ್ಯವಾಗುವಂತೆ ಬಾಡಿಗೆ ಆಧಾರಿತ ಯಂತ್ರೋಪಕರಣಗಳನ್ನು ಒದಗಿಸಲಾಗುತ್ತಿದೆ. ಇದಕ್ಕಾಗಿ 5.15ಕೋಟಿ ರೂ. ಸಹಾಯಧನ ಒದಗಿಸಲಾಗಿದ್ದು, 5850 ರೈತರು ಪ್ರಯೋಜನ ಪಡೆದಿದ್ದಾರೆ. ಮಳೆ ಕೊರತೆಯಿಂದ ಬೆಳೆ ಹಾನಿ ಸಂಭವಿಸಿದ 6ತಾಲೂಕುಗಳ ರೈತರಿಗೆ 11.50ಕೋಟಿ ರೂ. ಸಹಾಯಧನ ಒದಗಿಸಲಾಗಿದ್ದು, ಇದನ್ನು ನೇರವಾಗಿ ರೈತರ ಖಾತೆಗೆ ಜಮಾ ಮಾಡಲಾಗುತ್ತಿದೆ. ಪ್ರಕೃತಿ ವಿಕೋಪ ಅಡಿಯಲ್ಲಿ 14ಕೋಟಿ ರೂ. ವೆಚ್ಚದಲ್ಲಿ 528 ಕಾಮಗಾರಿಗಳನ್ನು ಅನುಷ್ಟಾನಗೊಳಿಸಲಾಗುತ್ತಿದೆ ಎಂದು ಹೇಳಿದರು.
ಶಾಸಕ ಸತೀಶ್ ಸೈಲ್, ಜಿಲ್ಲಾ ಪಂಚಾಯತ್ ಅಧ್ಯಕ್ಷ ಜಯಶ್ರೀ ಮೊಗೇರ, ಉಪಾಧ್ಯಕ್ಷ ಸಂತೋಷ ರೇಣಕೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಮಪ್ರಸಾದ್ ಮನೋಹರ್, ಅಪರ ಜಿಲ್ಲಾಧಿಕಾರಿ ಎಚ್.ಪ್ರಸನ್ನ ಉಪಸ್ಥಿತರಿದ್ದರು.

loading...

LEAVE A REPLY

Please enter your comment!
Please enter your name here