ಜೂನ್ ತಿಂಗಳಲ್ಲೇ ಅತಿಥಿ ಶಿಕ್ಷಕರ ನೇಮಕಾತಿ ಕೋರಿ ಪ್ರಸ್ತಾವನೆ: ಜಯಶ್ರೀ ಮೊಗೇರ

0
48
loading...

ಕಾರವಾರ : ಶೈಕ್ಷಣಿಕ ವರ್ಷ ಆರಂಭದಲ್ಲೇ ಅತಿಥಿ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಕೋರಿ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗುವುದು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಜಯಶ್ರೀ ಮೊಗೇರ ಅವರು ಹೇಳಿದರು.
ಅವರು ಮಂಗಳವಾರ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಿದರು.
ಸೆಪ್ಟಂಬರ್ ಬಳಿಕ ಅತಿಥಿ ಶಿಕ್ಷಕರ ನೇಮಕಾತಿ ನಡೆಸುವುದರಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ಮೇಲೆ ಪರಿಣಾಮ ಉಂಟಾಗುತ್ತಿದೆ. ಜೂನ್ ತಿಂಗಳಲ್ಲಿಯೇ ಅತಿಥಿ ಶಿಕ್ಷಕರ ನೇಮಕ ಪ್ರಕ್ರಿಯೆ ಆರಂಭಿಸಬೇಕು ಎಂದು ಸದಸ್ಯರ ಮನವಿಗೆ ಉತ್ತರಿಸಿದ ಅವರು ಈ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ಎಷ್ಟು ಅತಿಥಿ ಶಿಕ್ಷಕರ ಅಗತ್ಯವಿದೆ ಎಂಬ ಕುರಿತು ಪಟ್ಟಿಯನ್ನು ಸಲ್ಲಿಸಬೇಕು. ವರ್ಗಾವಣೆ, ಪದೋನ್ನತಿಯಿಂದ ತೆರವಾಗಿರುವ ಶಿಕ್ಷಕರ ಸ್ಥಾನವನ್ನು ತುಂಬಿಸಿ ವರ್ಷಾಂಭದಲ್ಲಿಯೇ ಪೂರ್ಣ ಪ್ರಮಾಣದಲ್ಲಿ ಶಿಕ್ಷಕರ ಲಭ್ಯತೆಯನ್ನು ಖಾತ್ರಿಪಡಿಸಬೇಕು ಎಂದರು.
ಎಂಟನೇ ತರಗತಿವರೆಗೆ ಇಂಗ್ಲಿಷ್ ಮಾಧ್ಯಮ ಇರುವ ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮದಲ್ಲಿ 9ನೇ ತರಗತಿ ಶಿಕ್ಷಣ ನೀಡಲು ಕ್ರಮ ಕೈಗೊಳ್ಳಬೇಕು. ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಯೋಜನೆಯಡಿ ಜಿಲ್ಲೆಯಲ್ಲಿ ಹಲವು ಶಾಲಾ ಕೊಠಡಿಗಳನ್ನು ನಿರ್ಮಿಸಲಾಗಿದೆ. ಆದರೆ ಇನ್ನೂ ಮಣ್ಣಿನಿಂದ ಕಟ್ಟಲಾಗಿರುವ ಹಲವು ಶಾಲಾ ಗೋಡೆಗಳು ಇದ್ದು, ಈ ಕುರಿತು ವರದಿಯನ್ನು ಸಲ್ಲಿಸಬೇಕು. ಮಣ್ಣಿನ ಗೋಡೆಗಳನ್ನು ಬದಲಾಯಿಸಲು ಅಗತ್ಯ ನೆರವು ಕೋರಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಮಪ್ರಸಾದ್ ಮನೋಹರ ಹೇಳಿದರು.
ಬಾಕಿ ಅನುದಾನ ಬಳಕೆ: ಗ್ರಾಮ ಪಂಚಾಯತ್‍ಗಳಲ್ಲಿ ವಿದ್ಯುತ್ ಬಿಲ್ ಭರಿಸಲು ನೀಡಿರುವ ಅನುದಾನದಲ್ಲಿ ಉಳಿತಾಯವಾಗಿರುವ ಮೊತ್ತವನ್ನು ಅಭಿವೃದ್ಧಿ ಕಾರ್ಯಗಳಿಗೆ ಬಳಸಲು ಅನುಮತಿ ನೀಡಲಾಗುತ್ತಿದೆ. ಈ ಕುರಿತು ವಿವರವಾದ ಪ್ರಸ್ತಾವನೆಯನ್ನು ಸಲ್ಲಿಸುವ ಗ್ರಾಮ ಪಂಚಾಯತ್‍ಗಳ ಬೇಡಿಕೆಗಳಿಗೆ ಅನುಮತಿ ನೀಡಲಾಗಿದೆ. ಆದರೆ ಕೆಲವು ತಾಂತ್ರಿಕ ತೊಡಕುಗಳ ಕಾರಣ ಉಳಿಕೆ ಮೊತ್ತವನ್ನು ಬ್ಯಾಂಕ್‍ನಿಂದ ಪಡೆಯಲು ಸಾಧ್ಯವಾಗುತ್ತಿಲ್ಲ. ಈ ಸಮಸ್ಯೆಯನ್ನು ಆದಷ್ಟು ಬೇಗನೆ ಬಗೆಹರಿಸಲು ಪ್ರಯತ್ನಿಸಲಾಗುವುದು ಎಂದು ಅವರು ಹೇಳಿದರು.
ಕುಡಿಯುವ ನೀರಿನ ಯೋಜನೆ: ಜಿಲ್ಲೆಯಲ್ಲಿ ಕಳೆದ ಸಾಲಿನಲ್ಲಿ ಕುಡಿಯುವ ನೀರಿನ ಯಾವುದೇ ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗಿಲ್ಲ. ಅದೇ ರೀತಿ ಈ ಬಾರಿಯೂ ಹಳೆ ಯೋಜನೆಗಳನ್ನು ಪೂರ್ಣಗೊಳಿಸಲು ಒತ್ತು ನೀಡಲಾಗುವುದು. ಜಿಲ್ಲೆಯಲ್ಲಿ ಚಾಲ್ತಿಯಲ್ಲಿರುವ ಕುಡಿಯುವ ನೀರಿನ ಕಾಮಗಾರಿ ಪೂರ್ಣಗೊಳಿಸಲು ಸುಮಾರು 200ಕೋಟಿ ರೂ. ಅಗತ್ಯವಿದೆ ಎಂದು ಅವರು ತಿಳಿಸಿದರು.
ಹೊಸದಾಗಿ ಆಯ್ಕೆಯಾಗಿರುವ ಎಲ್ಲಾ ಜಿಲ್ಲಾ ಪಂಚಾಯತ್ ಸದಸ್ಯರನ್ನು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರು ಆತ್ಮೀಯವಾಗಿ ಸ್ವಾಗತಿಸಿದರು. ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಸಂತೋಷ ರೇಣಕೆ, ಜಿ.ಪಂ ಸದಸ್ಯರು, ತಾಲೂಕು ಪಂಚಾಯತ್ ಅಧ್ಯಕ್ಷರು ಉಪಸ್ಥಿತರಿದ್ದರು.

loading...

LEAVE A REPLY

Please enter your comment!
Please enter your name here