0
21
loading...

ಗೋಕಾಕ 01: ಶಿಕ್ಷಣ, ಆರೋಗ್ಯ, ನೀರಾವರಿ ಕ್ಷೇತ್ರಗಳಿಗೆ ಹೆಚ್ಚಿನ ಮಹತ್ವ ನೀಡುವುದರೊಂದಿಗೆ ಜಿಲ್ಲೆಯ ಸರ್ವಾಂಗೀಣ ಅಭಿವೃದ್ದಿಗೆ ಶ್ರಮಿಸುವುದಾಗಿ ಸಣ್ಣ ಕೈಗಾರಿಕೆಗಳ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಹೇಳಿದರು.
ಶುಕ್ರವಾರದಂದು ನಗರದ ತಾಪಂ ಸಭಾ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ರೋಗವಾಹಕ ಆಶ್ರಿತಾ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ ಬೆಳಗಾವಿ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಜಿಲ್ಲಾ ಮಟ್ಟದ ಮಲೇರಿಯಾ ವಿರೋಧಿ ಮಾಸಾಚರಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಆರೋಗ್ಯ ಮತ್ತು ಶಿಕ್ಷಣ ಈ ಇಲಾಖೆಗಳು ಸಮಾಜದ ಅಭಿವೃದ್ದಿಯಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ವೈದ್ಯರು ಮತ್ತು ಶಿಕ್ಷಕರು ಜಾತ್ಯಾತೀತ ಹಾಗೂ ಪಕ್ಷಾತೀತವಾಗಿ ಜನರ ಸೇವೆ ಮಾಡುವಂತೆ ಸಲಹೆ ನೀಡಿದ ಅವರು ರೋಗಗಳ ನಿಯಂತ್ರಣದ ಬಗ್ಗೆ ಜನರಲ್ಲಿ ಜಾಗೃತಿಯನ್ನು ಮೂಡಿಸಿ ಅವುಗಳನ್ನು ನಿಯಂತ್ರಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಿಸಲು ಶ್ರಮಿಸುವಂತೆ ಕರೆ ನೀಡಿದರು.
ಜಿಲ್ಲಾ ರೋಗವಾಹಕ ಆಶ್ರಿತಾ ರೋಗಗಳ ನಿಯಂತ್ರಣಾಧಿಕಾರಿ ಡಾ.ಎಮ್.ಎಸ್.ಪಲ್ಲೆದ ಮಾತನಾಡಿ ಜಿಲ್ಲೆಯಲ್ಲಿ ಮಲೇರಿಯಾ ರೋಗ ನಿಯಂತ್ರಣಕ್ಕಾಗಿ ಮುಂಜಾಗೃತಾ ಕ್ರಮ ಕೈಗೊಂಡಿದ್ದರಿಂದ ಜಿಲ್ಲೆಯಲ್ಲಿ ಅದರ ಪ್ರಕರಣಗಳು ಕಡಿಮೆಯಾಗಿವೆ. ಜಿಲ್ಲೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಮಲೇಯಾರಿ 10, ಡೆಂಘಿ 72, ಚಿಕನ್ ಗುನ್ಯಾ 5 ಪ್ರಕರಣಗಳು ಜಿಲ್ಲೆಯಲ್ಲಿ ಕಂಡು ಬಂದಿದ್ದು ಅವುಗಳ ನಿಯಂತ್ರಣಕ್ಕಾಗಿ ಹಲವಾರು ಕಾರ್ಯಕ್ರಮಗಳ ಮೂಲಕ ಶ್ರಮಿಸಲಾಗುತ್ತಿದೆ ಎಂದು ಹೇಳಿದರು.
ವೈದ್ಯರ ದಿನದ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ. ಅಪ್ಪಾಸಾಹೇಬ ನರಟ್ಟಿ ಹಾಗೂ ಹಾಗೂ ಗೋಕಾಕ ತಾಲೂಕಾ ವೈದ್ಯಾಧಿಕಾರಿ ಡಾ. ಆರ್. ಎಸ್. ಬೆಣಚಿನಮರಡಿ ಅವರನ್ನು ಸಚಿವರು ಸನ್ಮಾನಿಸಿದರು.
ಆರೋಗ್ಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳಿಂದ ನೂತನ ಸಚಿವ ರಮೇಶ ಜಾರಕಿಹೊಳಿ ಅವರನ್ನು ಸನ್ಮಾನಿಸಲಾಯಿತು.
ಈ ಕಾರ್ಯಕ್ರಮದಲ್ಲಿ ನಗರಾಧ್ಯಕ್ಷ ತಳದಪ್ಪ ಅಮ್ಮಣಗಿ, ಉಪಾಧ್ಯಕ್ಷೆ ವಿಜಯಲಕ್ಷ್ಮೀ ಜತ್ತಿ, ಜಿಪಂ ಸದಸ್ಯರಾದ ಟಿ.ಆರ್.ಕಾಗಲ, ಮಡ್ಡೆಪ್ಪ ತೋಳಿನವರ, ಕ್ಷೇತ್ರಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ ಉಪಸ್ಥಿತರಿದ್ದರು.

loading...

LEAVE A REPLY

Please enter your comment!
Please enter your name here