loading...

ಕನ್ನಡಮ್ಮ ಸುದ್ದಿ-ರಾಣೇಬೆನ್ನೂರ : ಸ್ಥಳೀಯ ನಗರಸಭೆ ಮಾಜಿ ಅಧ್ಯಕ್ಷ ಹಾಗೂ ರಾಜ್ಯ ಕಾಂಗ್ರೆಸ್ ಕಾರ್ಮಿಕ ಘಟಕದ ಸಹಕಾರ್ಯದರ್ಶಿ ಬಸವರಾಜ (ರಾಜಣ್ಣ) ಪಾಟೀಲ ಪಕ್ಷದ ಹುದ್ದೆ ಹಾಗೂ ಪ್ರಾಥಮಿಕ ಸದಸ್ಯತ್ವಕ್ಕೆ ಸೋಮವಾರ ರಾಜೀನಾಮೆ ಸಲ್ಲಿಸಿದ್ದಾರೆ.
ನಗರದ ತಮ್ಮ ನಿವಾಸದಲ್ಲಿ ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಥಳೀಯ ಮಟ್ಟದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತರನ್ನು ಕಡೆಗಣಿಸಲಾಗುತ್ತಿರುವುದು ಹಾಗೂ ಉಸಿರುಗಟ್ಟಿಸುವ ವಾತಾವರಣದಿಂದ ಬೇಸತ್ತು ಈ ನಿರ್ಧಾರಕ್ಕೆ ಬಂದಿದ್ದೇನೆ. ಪ್ರಧಾನಿ ಮೋದಿ ದೇಶದ ಅಭಿವೃದ್ಧಿ ಕುರಿತು ಹೊಂದಿರುವ ಕಳಕಳಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಎಲ್ಲ ಸಮುದಾಯಗಳ ಜನರನ್ನು ಸಮನಾಗಿ ಕಂಡು ಜಾತ್ಯಾತೀತ ಮನೋಭಾವನೆಯಿಂದ ಕಾರ್ಯನಿರ್ವಹಿಸುತ್ತಿರುವುದನ್ನು ಮೆಚ್ಚಿ ನನ್ನ ಬೆಂಬಲಿಗರೊಂದಿಗೆ ಮೇ 24ರಂದು ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಲು ನಿರ್ಧರಿಸಿದ್ದೇನೆ. ಮುಂದಿನ ದಿನಗಳಲ್ಲಿ ಪಕ್ಷದ ಒಬ್ಬ ಸಾಮಾನ್ಯ ಕಾರ್ಯಕರ್ತನಾಗಿ ಯಡಿಯೂರಪ್ಪ ಸಹಕಾರದಿಂದ ನಗರದ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ. ಇದಲ್ಲದೆ ಮಾಜಿ ಸಚಿವ ಸಿ.ಎಂ.ಉದಾಸಿ, ಪಕ್ಷದ ಜಿಲ್ಲಾಧ್ಯಕ್ಷ ಶಿವರಾಜ ಸಜ್ಜನ, ನಗರ ಘಟಕದ ಅಧ್ಯಕ್ಷ ಚೋಳಪ್ಪ ಕಸವಾಳ ಜೊತೆಗೂಡಿ ಪಕ್ಷವನ್ನು ಪ್ರಬಲವಾಗಿ ಸಂಘಟಿಸಲು ಉತ್ಸುಕನಾಗಿದ್ದೇನೆ ಎಂದರು.
ಪ್ರಕಾಶ ಪಾಟೀಲ, ಗಿರೀಶ ಬುಡ್ಡಮ್ಮನವರ, ಸುರೇಶ ಮಳವಳ್ಳಿ, ಪಿ.ಬಿ.ಪಾಟೀಲ ಮತ್ತು ಇತರರು ಸುದ್ದಿಗೋಷ್ಠಿಯಲ್ಲಿ ಇದ್ದರು.

loading...