ಅನುದಾನ ವಾಪಸ್ ಹೋಗದಂತೆ ಎಚ್ಚರ ವಹಿಸಲು ಅಧಿಕಾರಿಗಳಿಗೆ ಜಯಶ್ರೀ ಸೂಚನೆ

0
12
loading...

ಕನ್ನಡಮ್ಮ ಸುದ್ದಿ-ಕಾರವಾರ: 2018-19ನೇ ಸಾಲಿನ ಕ್ರಿಯಾ ಯೋಜನೆ ಸಿದ್ಧಪಡಿಸಿ ಅನುಮೋದನೆ ಪಡೆಯುವಂತೆ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ಎಲ್ಲ ಇಲಾಖೆಗಳಿಗೆ ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಜಯಶ್ರೀ ಮೊಗೇರ ತಿಳಿಸಿದ್ದಾರೆ.
ಜಿಲ್ಲಾ ಪಂಚಾಯ್ತಿಯಲ್ಲಿ ಸೋಮವಾರ ಜೂನ್ ತಿಂಗಳ ಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತಿದ್ದರು. ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ವಿವಿಧ ಇಲಾಖೆಗಳು 2018-19ನೇ ಸಾಲಿಗೆ ಕ್ರಿಯಾ ಯೋಜನೆ ತಯಾರಿಸಿ ವಿವಿಧ ಸಮಿತಿಗಳ ಅನುಮೋದನೆ ಪಡೆದು ಕಾಮಗಾರಿಗಳನ್ನು ಆರಂಭಿಸಬೇಕು ಎಂದು ಸೂಚಿಸಿದರು.

ಕಳೆದ ಸಾಲಿನ ಯೋಜನೆಗಳ ಕಾಮಗಾರಿಗಳು ಬಾಕಿ ಉಳಿದಿದ್ದಲ್ಲಿ ಕೂಡಲೆ ಪೂರ್ಣಗೊಳಿಸಿ ಈ ಸಾಲಿನ ಯೋಜನೆಗಳನ್ನು ಕೈಗೆತ್ತಿಕೊಳ್ಳಬೇಕು ಹಾಗೂ ಯಾವುದೇ ಕಾರಣಕ್ಕೂ ಅನುದಾನ ವಾಪಸು ಹೋಗದಂತೆ ನಿಗದಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಎಂದರು.
ಕಳೆದ ಸಾಲಿಗಿಂತ ಈ ಬಾರಿ ಉತ್ತ ಮುಂಗಾರು ಆರಂಭವಾಗಿದ್ದು ರೈತರಿಗೆ ಪೂರಕ ಕಾರ್ಯಕ್ರಮಗಳನ್ನು ಕೈಗೆತ್ತಿಕೊಳ್ಳಬೇಕೆಂದ ಅವರು, ಕೃಷಿ ಮತ್ತು ತೋಟಗಾರಿಕೆ ಇಲಾಖೆಯಿಂದ ಈಗಾಗಲೇ ಕೈಗೊಂಡ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸುವ ಸಲುವಾಗಿ ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದು ಅವರು ತಿಳಿಸಿದರು.

ಭಿತ್ತನೆ ಬೀಜ ಮತ್ತು ರಸ ಗೊಬ್ಬರ ಸಮರ್ಪಕ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು ಹಾಗೂ ತೋಟಗಾರಿಕೆ ಬೆಳೆಗಳಿಗೆ ವಿಮಾ ಸೌಲಭ್ಯಗಳನ್ನು ರೈತರು ಪಡೆಯಲು ಪ್ರೋತ್ಸಾಹಿಸಬೇಕು ಎಂದು ಅವರು ತಿಳಿಸಿದರು.
ಉತ್ತರ ಕನ್ನಡ ಜಿಲ್ಲೆಯಲ್ಲಿ ಬೀಳುತ್ತಿರುವ ತೀವ್ರತರದ ಮಳೆಯಿಂದ ಕೆಲವೆಡೆ ಹಾನಿಯಾಗುತ್ತಿದ್ದು ಸಂತ್ರಸ್ಥರ ನೆರವಿಗೆ ಅಧಿಕಾರಿಗಳು ತಕ್ಷಣ ಸ್ಪಂದಿಸಬೇಕು. ರಸ್ತೆ ಹಾಗೂ ಇತರ ಕಾಮಗಾರಿಗಳನ್ನು ಕೈಗೊಂಡು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು ಎಂದರು.

ಲೋಕೋಪಯೋಗಿ ಇಲಾಖೆ, ಮೀನುಗಾರಿಕೆ, ಕೃಷಿ, ತೋಟಗಾರಿಕೆ ಇಲಾಖೆ, ವಿವಿಧ ನಿಗಮ ಮಂಡಳಿಗಳು, ಸಮಾಜ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ, ಆಹಾರ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಮಾಡಲಾಯಿತು. ಜಿಲ್ಲಾ ಪಂಚಾಯ್ತಿ ಉಪಾಧ್ಯಕ್ಷ ಸಂತೋಷ ರೇಣಕೆ, ಉಪ ಕಾರ್ಯದರ್ಶಿ ಆರ್.ಜಿ.ನಾಯಕ್ ಉಪಸ್ಥಿತರಿದ್ದರು.

loading...