ಮಕ್ಕಳ ಹಕ್ಕುಗಳ ರಕ್ಷಣೆಗೆ ಜಾಗೃತಿ ಅಗತ್ಯ : ನ್ಯಾ.ಕಟ್ಟಿ

0
13
loading...

ಬಾಗಲಕೋಟೆ: ಮಕ್ಕಳ ಹಕ್ಕುಗಳ ರಕ್ಷಣೆಗೆ ಜಾಗೃತಿ ಅಗತ್ಯವಾಗಿದ್ದು, ಅದರ ಜೊತೆಗೆ ಮನಪರಿವರ್ತನೆ ಮಾಡುವ ಕೆಲಸವಾಗಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಅನೀಲ ಕಟ್ಟಿ ಹೇಳಿದರು.
ಜಿ.ಪಂ ಸಭಾಭವನದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಸ್ಥೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ವಕೀಲರ ಸಂಘದ ಸಹಯೋಗದಲ್ಲಿ ಹಮ್ಮಿಕೊಂಡ ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸರಕಾರ ಮಕ್ಕಳ ಹಕ್ಕುಗಳ ರಕ್ಷಣೆಗೆ ಹಲವಾರು ಕಾಯ್ದೆ, ಕಾನೂನುಗಳನ್ನು ಜಾರಿಗೆ ತಂದಿದ್ದರೂ ಬಾಲಕರನ್ನು ದುಡಿಸಿಕೊಳ್ಳುವ ಪ್ರವೃತ್ತಿ ಕಂಡು ಬರುತ್ತಿರುವುದು ವಿಷಾದನೀಯ ಸಂಘತಿಯಾಗಿದೆ ಎಂದರು.

ಉಳ್ಳವರಿಗೆ ತಮ್ಮ ಮಕ್ಕಳನ್ನು ದುಡಿಯಲು ಕಳುಹಿಸುವ ಪ್ರವೃತ್ತಿ ಹೊಂದಿರುವುದಿಲ್ಲ. ಬಾಲ ಕಾರ್ಮಿಕರಾಗಲು ಬಡತನ, ಅಷ್ಪ್ರುಶ್ಯತೆ, ಅನಿಷ್ಟ ಪದ್ದತಿಗಳೇ ಇದಕ್ಕೆ ಶಾಪವಾಗಿ ಪರಿಣಮಿಸಿದ್ದು, ಇದನ್ನು ನಿರ್ಮೂಲನೆ ಮಾಡಲು ಎಲ್ಲರಿಗೂ ಶಿಕ್ಷಣ ಅಗತ್ಯವಾಗಿದೆ. ಎಲ್ಲಿ ಬಾಲಕಾರ್ಮಿಕ ದುಡಿಸಿಕೊಳ್ಳುವ ಪ್ರವೃತ್ತಿ ಇದೆ ಅಲ್ಲಿ ಮನಪರಿವರ್ತನೆ ಮಾಡುವ ಕೆಲಸವಾಗಬೇಕು. ಈ ನಿಟ್ಟಿನಲ್ಲಿ ಕಾರ್ಮಿಕ ಇಲಾಖೆ, ಮಕ್ಕಳ ರಕ್ಷಣಾ ಸಮಿತಿ, ನ್ಯಾಯಾಲಯ ಜೊತೆಗೂಡಿ ಜಾಗೃತಿ ಮೂಡಿಸುವ ಮೂಲಕ ಬಾಲಕಾರ್ಮಿಕ ಪದ್ದತಿ ನಿರ್ಮೂಲನೆ ಮಾಡಲು ಮುಂದಾಗಬೇಕು ಎಂದರು.
ಕುಟುಂಬದ ಆದಾಯ ಹೆಚ್ಚಿಸುವ ಮನೋಭಾವನೆಯಿಂದ ಪಾಲಕರು ಬಾಲ್ಯದಲ್ಲಿಯೇ ಮಕ್ಕಳನ್ನು ಕೆಲಸಕ್ಕೆ ಕಳುಹಿಸಲು ಮುಂದಾಗುತ್ತಾರೆ. ಅಂತಹ ಪಾಲಕರಿಗೆ ತಿಳುವಳಿಕೆ ನೀಡುವ ಮೂಲಕ ಮಕ್ಕಳನ್ನು ಶಿಕ್ಷಣವಂತರನ್ನಾಗಿ ಮಾಡಬೇಕು. 14 ವರ್ಷದೊಳಗಿನ ಮಕ್ಕಳನ್ನು ಯಾವುದೇ ವೃತ್ತಿಯಲ್ಲಿ ತೊಡಗಿಸಿದರು ಮಕ್ಕಳ ಹಕ್ಕುಗಳ ರಕ್ಷಣೆ ಮೇಲೆ ಉಲ್ಲಂಘಿಸಿದಂತಾಗುತ್ತದೆ ಎಂದರು. ಪ್ರಾಥಮಿಕ ಶಿಕ್ಷಣ ಕಡ್ಡಾಯವಾಗಿದ್ದು, ಎಲ್ಲ ಮಕ್ಕಳ ಶಿಕ್ಷಣ ಪಡೆದುಕೊಳ್ಳಬೇಕು. ಇದರಿಂದ ಬಾಲಕಾರ್ಮಿಕ ಪದ್ದತಿ ನಿರ್ಮೂಲನೆ ಮಾಡಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸುಜಾತಾ ಪಾಟೀಲ ಮಾತನಾಡಿ ಈ ಬಾಲಕಾರ್ಮಿಕ ಪದ್ದತಿಯಿಂದ ಮಕ್ಕಳ ಸುಂದರ ಜೀವನ ಹಾಳಾಗುತ್ತಿದ್ದು, ಈ ಪದ್ದತಿ ಸಂಪೂರ್ಣ ನಿರ್ಮೂಲನೆಯಾಗಬೇಕೆಂದರು.

ಇದೇ ಸಂದರ್ಭದಲ್ಲಿ ಬಾದಾಮಿ ತಾಲೂಕಿನ ಕೆರೂರಿನ ಗುರು ಪುಟ್ಟರಾಜ ಜ್ಞಾನ ಜ್ಯೋತಿ ಕಲಾ ತಂಡದಿಂದ ಬಾಲ ಕಾರ್ಮಿಕ ಕುರಿತು ಕಿರು ನಾಟಕ ಪ್ರದರ್ಶಿಸಲಾಯಿತು. ಕಾರ್ಯಕ್ರಮದಲ್ಲಿ ವಕೀಲರ ಸಂಘದ ಅಧ್ಯಕ್ಷ ಸಿ.ಬಿ.ಪಾಟೀಲ, ಕಾರ್ಯದರ್ಶಿ ಎಸ್.ಎ.ಹಾವರಗಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ಗುಲಾಬ ನದಾಪ್, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸಂಸ್ಥೆಯ ಯೋಜನಾ ನಿರ್ದೇಶಕ ಸುಧಾಕರ ಬಡಿಗೇರ ಸೇರಿದಂತೆ ಇತರರು ಉಪಸ್ಥಿತರಿದ್ದರು. ಪ್ರಾರಂಭದಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ ಅಶೋಕ ಬಾಳಗಟ್ಟಿ ಸ್ವಾಗತಿಸಿ, ನಿರೂಪಣೆ ಮಾಡಿದರು.

loading...