ಮಲೇರಿಯಾ ರೋಗ ನಿಯಂತ್ರಣ ಕ್ರಮಕ್ಕೆ ಸೂಚನೆ

0
19
loading...

ವಿಜಯಪುರ: ಮಲೇರಿಯಾ ರೋಗ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣವೇ ಪರೀಕ್ಷಿಸಿ ಚಿಕಿತ್ಸೆ ಪಡೆಯುವ ಮೂಲಕ ರೋಗ ಹರಡುವಿಕೆಯನ್ನು ತಡೆಗಟ್ಟಬಹುದಾಗಿದ್ದು, ಅಧಿಕಾರಿಗಳು ಈ ಕುರಿತು ಸೂಕ್ತ ಗಮನ ಹರಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಸುಂದರೇಶಬಾಬು ಅವರು ಸೂಚಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ರಾಷ್ಟ್ರೀಯ ಮಲೇರಿಯಾ ವಿರೋಧ ಮಾಸಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಮಲೇರಿಯಾ ತಿಳುವಳಿಕೆ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಮಳೆಗಾಲದಲ್ಲಿ ಹಾಗೂ ನಿಂತ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗುವ ಹಿನ್ನಲೆಯಲ್ಲಿ ಅಧಿಕಾರಿಗಳು ಹಾಗೂ ಸಾರ್ವಜನಿಕರು ಸ್ವಚ್ಛತೆಗೆ ಹೆಚ್ಚಿನ ಗಮನ ನೀಡಬೇಕು. ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಸೊಳ್ಳೆಗಳ ತಾಣಗಳಲ್ಲಿ ಧೂಮೀಕರಣ ಮಾಢಬೇಕು. ನಿಂತ ನೀರಿನಲ್ಲಿ ಟೆಮಿಪಾಸ್ ಹಾಕುವ ಮೂಲಕ ಮಲೇರಿಯಾ, ಡೆಂಗ್ಯೂ, ಚಿಕುನಗುನ್ಯಾ ರೋಗಗಳ ನಿಯಂತ್ರಣಕ್ಕೆ ನೆರವಾಗುವಂತೆ ತಿಳಿಸಿದರು.
ರೋಗವಾಹಕ ಅಶ್ರಿತ ರೋಗಗಳ ನಿಯಂತ್ರಣಕ್ಕೆ ಸಾರ್ವಜನಿಕರು ಹಾಗೂ ಸಮುದಾಯವರೆಲ್ಲರೂ ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಿ ಈ ರೋಗಗಳ ನಿಯಂತ್ರಣಕ್ಕೆ ಸಹಕರಿಸಬೇಕು. ಮಲೇರಿಯಾ ರೋಗದ ಬೆಳವಣಿಗೆ, ಲಕ್ಷಣ, ಕಾರಣ, ಸೊಳ್ಳೆಗಳ ನಿಯಂತ್ರಣ ಸೇರಿದಂತೆ ಮನೆ=ಮನೆಗೆ ಭೇಟಿ ನೀಡಿ ಲಾರ್ವಾ ಸಮೀಕ್ಷೆ ನಡೆಸಿ ಆರೋಗ್ಯ ಶಿಕ್ಷಣವನ್ನು ಸಹ ನೀಡುವಂತೆ ಸೂಚಿಸಿದರು. ಸಭೆಯಲ್ಲಿ ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಸಂಪತ್ ಗುಣಾರಿ ಪಿಪಿಟಿ ಮೂಲಕ ಮಲೇರಿಯಾ, ಡೆಂಗ್ಯೂ, ಚಿಕುನ್‍ಗುನ್ಯಾ ರೋಗಗಳ ನಿಯಂತ್ರಣ ಬಗ್ಗೆ ಅವಶ್ಯಕ ಮಾಹಿತಿ ನೀಡಿದರು. ವಿವಿಧ ಇಲಾಖೆಗಳು ಮಲೇರಿಯಾ ನಿಯಂತ್ರಣದಲ್ಲಿ ವಹಿಸಬೇಕಾದ ಪಾತ್ರದ ಬಗ್ಗೆ ವಿವರಿಸಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ರಾಜುಕುಮಾರ ಯರಗಲ್, ವಿವಿಧ ಕಾರ್ಯಕ್ರಮ ಅಧಿಕಾರಿಗಳು, ತಾಲೂಕಾ ಆರೋಗ್ಯ ಅಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

loading...