ಅಂಗನವಾಡಿಗಳನ್ನು ಪ್ರಾಥಮಿಕ ಶಾಲಾ ಕಟ್ಟಡಕ್ಕೆ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಲು ಸೂಚನೆ

0
10
loading...

ವಿಜಯಪುರ: ಜಿಲ್ಲೆಯ ವಿವಿಧ ಬಾಡಿಗೆ ಕಟ್ಟಡಗಳಲ್ಲಿ ನಡೆಯುತ್ತಿರುವ ಅಂಗನವಾಡಿ ಶಾಲೆಗಳನ್ನು ಖಾಲಿಇರುವ ಸಮೀಪದ ಪ್ರಾಥಮಿಕ ಶಾಲಾ ಕಟ್ಟಡಕ್ಕೆ ಸ್ಥಳಾಂತರಿಸಲು ಅವಶ್ಯಕ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಮೊಹ್ಮದ ಮೊಹಸೀನ್‌ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿಂದು ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಅವರು, ಜಿಲ್ಲೆಯ ವಿವಿಧ ಬಾಡಿಗೆ ಕಟ್ಟಡಗಳಲ್ಲಿ 698 ಅಂಗನವಾಡಿ ಶಾಲೆಗಳು ಕಾರ್ಯನಿರ್ವಹಿಸುತ್ತಿವೆ. ಸರ್ಕಾರದ ಮಾರ್ಗಸೂಚಿಯನ್ವಯ ಪ್ರಾಥಮಿಕ ಶಾಲಾ ಕಟ್ಟಡಗಳಲ್ಲಿ ಅಂಗನವಾಡಿ ಆರಂಭಿಸಲು ಅವಕಾಶ ಇರುವ ಹಿನ್ನಲೆಯಲ್ಲಿ ಈ ಕುರಿತಂತೆ ಪರಿಶೀಲಿಸಿ ತಕ್ಷಣ ಅಂಗನವಾಡಿ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವಿವಿಧ ಶಾಲಾ ಕಟ್ಟಡಗಳು ಹಾಗೂ ಅಂಗನವಾಡಿ ಕಟ್ಟಡಗಳ ಸಣ್ಣಪುಟ್ಟ ದುರಸ್ತಿ ಕಾರ್ಯವನ್ನು ಸಹ ಕೈಗೊಳ್ಳುವಂತೆ ತಿಳಿಸಿದ ಅವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು ಪರಸ್ಪರ ಸಮನ್ವಯತೆಯಿಂದ ಕಟ್ಟಡಗಳ ದುರಸ್ತಿ ಕ್ರಮ ಕೈಗೊಳ್ಳುವ ಜೊತೆಗೆ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಗಮನಕ್ಕೂ ತರುವಂತೆ ಸೂಚಿಸಿ, ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ದಿ ನಿಗಮ ಹಾಗೂ ನಿರ್ಮಿತಿ ಕೇಂದ್ರಗಳ ವ್ಯಾಪ್ತಿಯಲ್ಲಿ ಬರುವ ಸಂಬಂಧಪಟ್ಟ ಎಲ್ಲ ಕಾಮಗಾರಿಗಳನ್ನು ಆದ್ಯತೆ ಮೇಲೆ ಪೂರ್ಣಗೊಳಿಸುವಂತೆ ಸೂಚನೆ ನೀಡಿದರು. ಅಕ್ಷರ ದಾಸೋಹ ಯೋಜನೆಯಡಿ ಮಕ್ಕಳಿಗೆ ಗುಣಮಟ್ಟದ ಉಪಹಾರ ದೊರೆಯುವಂತೆ ನೋಡಿಕೊಳ್ಳಬೇಕು. ಈ ಕುರಿತು ಕಾಲ-ಕಾಲಕ್ಕೆ ಪರಿಶೀಲನೆ ನಡೆಸಬೇಕು. ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಜೊತೆಗೆ ಅಡುಗೆ ತಯಾರಿಸುವವರ ಆರೋಗ್ಯವನ್ನು ಸಹ ತಪಾಸಣೆಗೆ ಒಳಪಡಿಸುವಂತೆ ತಿಳಿಸಿ, ವಿವಿಧ ಅಡುಗೆ ಕೋಣೆಗಳ ದುರಸ್ತಿ ಕಾರ್ಯವಿದ್ದಲ್ಲಿ ಪ್ರಕೃತಿ ವಿಕೋಪ ಸೇರಿದಂತೆ ಇನ್ನಿತರ ಅನುದಾನ ಬಳಸಿಕೊಂಡು ದುರಸ್ತಿ ಕಾರ್ಯ ಕೈಗೊಳ್ಳುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ಕೃಷಿ ಇಲಾಖೆ, ಕಂದಾಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಸಾರಿಗೆ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಜಿಲ್ಲಾಧಿಕಾರಿ ಎಸ್‌.ಬಿ.ಶೆಟ್ಟೆಣ್ಣವರ ಸ್ವಾಗತಿಸಿದರು. ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಸುಂದರೇಶಬಾಬು ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

loading...