ಗ್ರಾಮೀಣ ಕುಡಿಯುವ ನೀರಿಗೆ ಪ್ರತ್ಯೇಕ ಸಭೆ: ಸಿಇಒ ಎಂ.ರೋಷನ್

0
0
loading...

ಕಾರವಾರ: ಗ್ರಾಮೀಣ ಕುಡಿಯುವ ನೀರು ಯೋಜನೆಗಳ ಅನುಷ್ಠಾನ ಕುರಿತು ತಿಂಗಳಾಂತ್ಯದಲ್ಲಿ ಪ್ರತ್ಯೇಕ ಸಭೆ ನಡೆಸುವುದಾಗಿ ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ರೋಷನ್ ತಿಳಿಸಿದ್ದಾರೆ. ಗುರುವಾರ ಜಿಲ್ಲಾ ಪಂಚಾಯ್ತಿಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಅನುಪಾಲನಾ ವರದಿ ಸಂದರ್ಭದಲ್ಲಿ ಸದಸ್ಯರ ಪ್ರಶ್ನೆಗೆ ಪ್ರಕ್ರಿಯಿಸಿ, ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆ ಸಮರ್ಪಕ ಅನುಷ್ಠಾನ ತಮ್ಮ ಆದ್ಯತೆ. ಈ ಹಿನ್ನೆಲೆಯಲ್ಲಿ ತಿಂಗಳಂತ್ಯದಲ್ಲಿ ಜನಪ್ರತಿನಿಧಿಗಳ ಪ್ರತ್ಯೇಕ ಸಭೆ ನಡೆಸಿ ಸಲಹೆಗಳನ್ನು ಪಡೆಯಲಾಗುವುದು ಎಂದು ಹೇಳಿದರು.
ಪ್ರಸ್ತುತ 2018-19ನೇ ಸಾಲಿಗೆ 7550.15ಲಕ್ಷ ರೂ.ಗಳ ಕ್ರಿಯಾಯೋಜನೆ ತಯಾರಿಸಲಾಗಿದೆ. ಕಾಮಗಾರಿಗಳನ್ನು ಆಯಾ ತಾಲೂಕಿನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಹಾಗೂ ಚುನಾಯಿತ ಪ್ರತಿನಿಧಿಗಳೊಂದಿಗೆ ಚರ್ಚಿಸಿಯೇ ಅನುಷ್ಠಾನಗೊಳಿಸಲಾಗುವುದು ಎಂದು ಹೇಳಿದರು.

ಗ್ರಾಮೀಣ ಕುಡಿಯುವ ನೀರು ಸಮರ್ಪಕ ಸರಬರಾಜು ಸಂಬಂಧ ಪ್ರತಿ ತಾಲೂಕುಗಳಿಗೆ ನೋಡಲ್ ಅದಿಕಾರಿಗಳನ್ನು ನೇಮಿಸಲಾಗುವುದು. ಈಗಾಗಲೇ ಅನುದಾನ ಬಿಡುಗಡೆಗೂ ಸರ್ಕಾರ ಕ್ರಮ ಕೈಗೊಂಡಿದೆ. ಈ ಹಿಂದಿನ ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸುವುದು ಹಾಗೂ ಪ್ರಸಕ್ತ ಸಾಲಿನಲ್ಲಿ ಹೊಸ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ಸಂಬಂಧ ಕ್ರಿಯಾಯೋಜನೆಯಲ್ಲಿ ಸ್ಪಷ್ಟಪಡಿಸಲಾಗಿದೆ ಎಂದರು. ಈ ಹಿಂದಿನ ಸಮಸ್ಯೆಗಳನ್ನೂ ಪರಿಗಣನೆ ತೆಗೆದುಕೊಂಡೇ ಕ್ರಿಯಾ ಯೋಜನೆ ಸಿದ್ಧಪಡಿಸಲಾಗಿದ್ದು ಪ್ರಸಕ್ತ ಸಾಲಿನಲ್ಲಿ ಯಾವುದೇ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು. ಇದು ತಮ್ಮ ಆದ್ಯತೆಯೂ ಆಗಿದೆ ಎಂದರು.
ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆಯಲ್ಲಿ ಕೆಲವು ತಾಲೂಕುಗಳಿಗೆ ಅನುದಾನ ಬಿಡುಗಡೆಯಲ್ಲಿ ತಾರತಮ್ಯವಾಗಿದೆ ಎಂದು ಕೆಲವು ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅವರು ಗ್ರಾಮೀಣ ಕುಡಿಯುವ ನೀರು ಸರಬರಾಜು ವಿಷಯವಾಗಿ ಪ್ರತ್ಯೇಕ ಸಭೆ ನಡೆಸುವುದಾಗಿ ಸಭೆಯಲ್ಲಿ ಪ್ರಕಟಿಸಿದರು. ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಈವರೆಗೆ ಬಾಕಿಯಿರುವ ಸಾಮಗ್ರಿ ಬಿಲ್ಲುಗಳನ್ನು ಪಾವತಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

2013-14ನೇ ಸಾಲಿನಿಂದ 2017-18ರವರೆಗೆ ರೂ.611.95 ಲಕ್ಷ ಸಾಮಗ್ರಿ ಬಿಲ್ಲುಗಳನ್ನು ಬಾಕಿ ಇದ್ದು ಈವರೆಗೆ ರೂ. 493.86 ಲಕ್ಷ ಪಾವತಿಸಲಾಗಿದೆ. ತಾಂತ್ರಿಕ ದೋಷಗಳಿಂದಾಗಿ ಬಾಕಿ ಪಾವತಿಸಲು ತಡವಾಗಿದೆ. ಸರ್ಕಾರದ ಮಟ್ಟದಲ್ಲಿ ದೋಷ ಸರಿಪಡಿಸುವ ಕಾರ್ಯಕ್ರಮ ಪ್ರಗತಿಯಲ್ಲಿದ್ದು ಕೂಡಲೆ ಪಾವತಿಸಲಾಗುವುದು ಹಾಗೂ ಪ್ರಸಕ್ತ ಸಾಲಿನಲ್ಲಿ ಉದ್ಯೋಗ ಖಾತ್ರಿಯಲ್ಲಿ ವೈಯಕ್ತಿಕ ಉದ್ಯೋಗಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಸೃಜಿಸಲು ಉದ್ದೇಶವಿದೆ. ಹಾಗಾಗಿ ಕೂಲಿ ಮತ್ತು ಸಾಮಗ್ರಿ ಎರಡೂ ತರದ ಉದ್ಯೋಗ ಸೃಜಿಸಲಾಗುವುದು ಎಂದೂ ಅವರು ತಿಳಿಸಿದರು. ಉಳಿದಂತೆ ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆ ವಿಷಯಗಳನ್ನು ಸಭೆಯಲ್ಲಿ ಚರ್ಚಿಸಲಾಯಿತು. ಅಲ್ಲದೆ ವಿವಿಧ ಸ್ಥಾಯಿ ಸಮಿತಿಗಳ ಸಭೆಯ ನಡಾವಳಿಗಳನ್ನು ಅನುಮೋದಿಸಲಾಯಿತು.
ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಜಯಶ್ರೀ ಮೊಗೇರ ಅವರು ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಸಂತೋಷ ರೇಣಕೆ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ರತ್ನಾಕರ ಮಹಾದೇವ ನಾಯ್ಕ್, ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಸಂಜಯ ಮಾರುತಿ ಹಣಬರ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಜಯಮ್ಮ ಕೃಷ್ಣ ಹಿರಳ್ಳಿ ಉಪಸ್ಥಿತರಿದ್ದರು.

loading...