ವಿವಿಧ ವಸತಿನಿಲಯಗಳಿಗೆ ಜಿಲ್ಲಾಧಿಕಾರಿಗಳಿಂದ ಭೇಟಿ : ಪರಿಶೀಲನೆ

0
37

ವಿಜಯಪುರ: ನಗರದ ಅಫಜಲಪೂರ ಟಕ್ಕೆಯಲ್ಲಿರುವ ವಿವಿಧ ವಸತಿ ನಿಲಯಗಳಿಗೆ ಇಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ನಗರದ ಅಫಜಲಪೂರ ಟಕ್ಕೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ವಸತಿ ನಿಲಯದಲ್ಲಿ ವಿದ್ಯಾರ್ಥಿಗಳಿಗೆ ನೀಡುವ ಹಾಸಿಗೆ, ಹೊದಿಕೆ ಕುರಿತು ಹಾಗೂ ಇತರೆ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿ, ನಿಲಯಗಳಲ್ಲಿ ಸ್ವಚ್ಚತೆ ಬಗ್ಗೆ ಹೆಚ್ಚಿನ ಕಾಳಜಿ ವಹಿಸುವಂತೆ ಸೂಚನೆ ನೀಡಿದರು.
ನಂತರ ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿದ ಅವರು, ಅಲ್ಲಿನ ವ್ಯವಸ್ಥೆ ಕುರಿತು ಮೆಚ್ಚುಗೆ ವ್ಯಕ್ತಪಡಿಸಿ, ನಿರಾಶ್ರಿತರಿಗೆ ನೀಡುತ್ತಿರುವ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು.
ಮುಸ್ಲಿಂ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಭೇಟಿ ನೀಡಿ, ಮಕ್ಕಳೊಂದಿಗೆ ಮಾತನಾಡಿ, ನೀಡುತ್ತಿರುವ ಸೌಲಭ್ಯ-ಸಮಸ್ಯೆಗಳನ್ನು ಆಲಿಸಿದರು. ಮಕ್ಕಳಿಗೆ ನೀಡುತ್ತಿರುವ ಊಟ-ಉಪಹಾರ ಬಗ್ಗೆ ಮಕ್ಕಳಿಂದ ಮಾಹಿತಿ ಪಡೆದುಕೊಂಡ ಅವರು, ಶಾಲೆಯ ಡಿ ಗ್ರೂಪ್ ಸಿಬ್ಬಂದಿಗಳು ಸ್ವಚ್ಛತೆಗೆ ಆದ್ಯತೆ ನೀಡಬೇಕು ಸ್ವಚ್ಛತೆಯಲ್ಲಿ ಲೋಪ ಕಂಡು ಬಂದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.
ನಂತರ ಸಮಾಜ ಕಲ್ಯಾಣ ಇಲಾಖೆಯ ವಸತಿ ನಿಲಯಗಳಿಗೆ ನಿವೇಶನ ಒದಗಿಸುವ ಕುರಿತು ಖಾಲಿ ನಿವೇಶನಗಳನ್ನು ಖುದ್ದಾಗಿ ಪರಿಶೀಲನೆ ನಡೆಸಿ, ಖಾಲಿ ನಿವೇಶನ ಗುರುತಿಸಿ ಇಲಾಖೆಗೆ ಹಸ್ತಾಂತರಿಸುವ ಕುರಿತು ಚರ್ಚಿಸಿದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋದ್ದಾರ, ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿ ಸುರೇಶ ಕೋಕರೆ, ತಾಲೂಕಾ ಸಮಾಜ ಕಲ್ಯಾಣ ಅಧಿಕಾರಿ ನಿರ್ಮಲಾ ಭೂಸಗೊಂಡ ಹಾಗೂ ವಿವಿಧ ವಸತಿ ಶಾಲೆ ಪ್ರಾಚಾರ್ಯರು-ಮೇಲ್ವಿಚಾರಕರು ಉಪಸ್ಥಿತರಿದ್ದರು.

loading...