ಪ್ರಣಬ್ ಮುಖರ್ಜಿ ನಿಧನ: ಮುಖ್ಯಮಂತ್ರಿ, ಗಣ್ಯರಿಂದ ತೀವ್ರ ಸಂತಾಪ

0
16

ಬೆಂಗಳೂರು:- ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸೇರಿ ಅನೇಕ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಂತಾಪ ಸೂಚಿಸಿ, ಧೀಮಂತ ರಾಜಕಾರಣಿ, ಭಾರತದ ಮಾಜಿ ರಾಷ್ಟ್ರಪತಿ, ಭಾರತರತ್ನ ಪ್ರಣಬ್ ಮುಖರ್ಜಿ ವಿಧಿವಶರಾದ ಸುದ್ದಿ ತೀವ್ರ ಆಘಾತವನ್ನುಂಟು ಮಾಡಿದೆ. ಶ್ರೇಷ್ಠ ನೇತಾರರನ್ನು ಕಳೆದುಕೊಂಡ ಅನಾಥಪ್ರಜ್ಞೆ ಇಡೀ ದೇಶಕ್ಕೆ ಆವರಿಸಿದೆ. ಅವರೊಂದಿಗೆ ನನ್ನ ಒಡನಾಟದ ಕ್ಷಣಗಳನ್ನು ನೆನೆಯುತ್ತಾ, ಅವರಿಗೆ ಅಶ್ರುಪೂರ್ಣ ಶ್ರದ್ಧಾಂಜಲಿಗಳನ್ನು ಸಲ್ಲಿಸುತ್ತೇನೆ.
ಪ್ರಣಬ್ ರವರ ಸೇವೆ, ಸಾಧನೆಗಳು ಅನನ್ಯ. ದಶಕಗಳ ಕಾಲ ರಾಷ್ಟ್ರನಿರ್ಮಾಣ ಕಾರ್ಯದಲ್ಲಿ ಪ್ರಧಾನ ಪಾತ್ರ ವಹಿಸಿ, ಯೋಜನಾ ಆಯೋಗದ ಉಪಾಧ್ಯಕ್ಷರಾಗಿ, ವಾಣಿಜ್ಯ, ವಿದೇಶಾಂಗ, ಹಣಕಾಸು, ರಕ್ಷಣಾ ಸಚಿವರಾಗಿ ಅವರು ಅವಿಸ್ಮರಣೀಯ ಸೇವೆ ಸಲ್ಲಿಸಿದ್ದರು. ರಾಷ್ಟ್ರಪತಿಗಳಾಗಿ ಅವರು ದೇಶದ ಗರಿಮೆಯನ್ನು ಮತ್ತಷ್ಟು ಎತ್ತರಕ್ಕೆ ಕೊಂಡೊಯ್ದಿದ್ದರು ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ಪ್ರಣಬ್ ರಷ್ಟು ಸುದೀರ್ಘ ಕಾಲ ಆಡಳಿತದ ಕೇಂದ್ರ ಸ್ಥಾನದಲ್ಲಿದ್ದು, ಪ್ರಾಮಾಣಿಕವಾಗಿ, ಕಳಂಕರಹಿತರಾಗಿ ಸೇವೆ ಸಲ್ಲಿಸಿದ ಮತ್ತೋರ್ವ ಸರ್ವಾದರಣೀಯ ನಾಯಕ ಇರಲಾರರು. ದೇವರು ಅವರ ಆತ್ಮಕ್ಕೆ ಸದ್ಗತಿಯನ್ನು ದಯಪಾಲಿಸಲಿ, ಕುಟುಂಬದವರಿಗೆ, ಅಭಿಮಾನಿಗಳಿಗೆ ದುಃಖವನ್ನು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ! ಎಂದು ಯಡಿಯೂರಪ್ಪ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.

ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದು, ಮಾಜಿ ರಾಷ್ಟ್ರಪತಿಗಳು, ಕೇಂದ್ರದ ಮಾಜಿ ಸಚಿವರು ಮತ್ತು ಹಿರಿಯ ಕಾಂಗ್ರೆಸ್ ನಾಯಕ ಪ್ರಣಬ್ ಮುಖರ್ಜಿ ಅವರ ನಿಧನದ ಸುದ್ದಿ ಅತೀವ ದುಃಖವನ್ನುಂಟು ಮಾಡಿದೆ. ಹಣಕಾಸು ಮತ್ತು ವಿದೇಶಾಂಗ ವ್ಯವಹಾರಗಳ ಖಾತೆಗಳ ಸಚಿವರಾಗಿ‌ ಅವರು ಮಾಡಿರುವ ಸಾಧನೆಗೆ ದೇಶ‌ ಸದಾ ಋಣಿಯಾಗಿದೆ. ಅವರ‌ ಕುಟುಂಬ ಮತ್ತು ಬಂಧು ಮಿತ್ರರ‌ ಶೋಕದಲ್ಲಿ‌ ನಾನೂ ಭಾಗಿಯಾಗಿದ್ದೇನೆ ಎಂದು ಸಂತಾಪ ಸೂಚಕದಲ್ಲಿ ತಿಳಿಸಿದ್ದಾರೆ.

ಕೃಷಿ ಸಚಿವ ಬಿ.ಸಿ.ಪಾಟೀಲ್ ಸಂತಾಪ ಸೂಚಿಸಿ, ಭಾರತದ 13ನೇ ರಾಷ್ಟ್ರಪತಿಯಾಗಿ, ದೇಶದ ಆರ್ಥಿಕ ಸಚಿವರಾಗಿ ಕಾರ್ಯನಿರ್ವಹಿಸಿದ್ದ ಭಾರತ ರತ್ನ ಪ್ರಶಸ್ತಿ ಪುರಸ್ಕೃತ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಅವರು ವಿಧಿವಶರಾಗಿರುವುದು ಬಹಳ ನೋವಿನ ಸಂಗತಿ. ಇವರದ್ದು ಸಂಸತ್ತಿನಲ್ಲಿ ಐದು ದಶಕಗಳ ಕಾಲದ ವೃತ್ತಿಜೀವನವಾಗಿತ್ತು.
ಇವರು ಹಲವಾರು ಮಂತ್ರಿ ಪದವಿಯನ್ನು ನಿಭಾಯಿಸಿದರೆ; ರಕ್ಷಣ, ವಿತ್ತ, ಬಾಹ್ಯ ಇಲಾಖೆ, ಆದಾಯ, ನೌಕಾ, ಸಾರಿಗೆ, ಸಂಪರ್ಕ ವ್ಯವಸ್ಥೆ, ಆರ್ಥಿಕ ಇಲಾಖೆ, ವಾಣಿಜ್ಯ ಹಾಗು ಉದ್ದಿಮೆ ಸಚಿವರಾಗಿಯೂ ಸೇವೆ ಸಲ್ಲಿಸಿರುವ ಶ್ರೀಯುತರ ಅಗಲಿಕೆ ರಾಜಕೀಯ ಕ್ಷೇತ್ರಕ್ಕೆ ಭರಿಸಲಾಗದ ನಷ್ಟ.
“ನಾನಾ ರಾಜ್ಯ, ದೇಶಗಳ ಜನರೊಂದಿಗೆ ಸಂವಹನ ಮಾಡುವ ಅವಕಾಶವನ್ನು ನೀಡಿ, ಎಲ್ಲರನ್ನೂ ಒಂದುಗೂಡಿಸುವಂತೆ ಮಾಡುವುದು ಭಾಷೆ ಹಾಗೂ ಸಾಹಿತ್ಯದಿಂದ ಮಾತ್ರ ಸಾಧ್ಯ” ಎನ್ನುತ್ತಿದ್ದರು.
ಇವರ ಆತ್ಮಕ್ಕೆ ದೇವರು ಶಾಂತಿಯನ್ನು ಹಾಗೂ ಅವರ ಕುಟುಂಬಕ್ಕೆ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ನೀಡಲೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಬಿ.ಸಿ.ಪಾಟೀಲ್ ಸಂತಾಪ ಸೂಚಕದಲ್ಲಿ ತಿಳಿಸಿದ್ದಾರೆ.

ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಆರೋಗ್ಯ ಸಚಿವ ಶ್ರೀರಾಮುಲು, ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೇರಿದಂತೆ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.

loading...